ಮುಧೋಳ: ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸತೀಶ್ ಬಂಡಿವಡ್ಡರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ನ ಮೊದಲ ವಿಕೆಟ್ ಪತನವಾಗಿದೆ.
ಸದ್ಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಬಂಡಿವಡ್ಡರ ಕಾಂಗ್ರೆಸ್ನಿಂದ ಮುಧೋಳ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಇದೀಗ ಟಿಕೆಟ್ ಕೈ ತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದರು. ಇದರ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಬಂಡಿವಡ್ಡರ 60 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ ಈ ಬಾರಿಯೂ ಟಿಕೆಟ್ ಸಿಗುತ್ತದೆ ಎಂದು ಭಾವಿಸಿದ್ದರು. ಆದರೆ ಅಂತಿಮ ಹಂತದಲ್ಲಿ ಸತೀಶ್ ಅವರಿಗೆ ನಿರಾಸೆಯಾಗಿದೆ.
ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳು ಪಕ್ಷದಿಂದ ಹೊರಬರಲು ಒತ್ತಡ ಹಾಕಿದ್ದರು. ಹೀಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯನಮಠ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸತೀಶ್ ಬಂಡಿವಡ್ಡರ್ ಅವರ ಮುಂದಿನ ನಡೆ ಬಾಗಲಕೋಟೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ.